ಹೃದಯಾಘಾತದಿಂದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ವಿಧಿವಶ

ಗದಗ : ಗದಗ ಹಾಗೂ ರೋಣ ಕ್ಷೇತ್ರದ ಮಾಜಿ ಶಾಸಕ ಶ್ರಿಶೈಲಪ್ಪ ಬಿದರೂರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಬಾರಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದ ಶ್ರೀಶೈಲಪ್ಪ ಬಿದರೂರು ಆಕಾಂಕ್ಷಿಗಳ ಸಭೆಯಲ್ಲಿ ಭಾಗಿಯಾಗಿದ್ದರು.

ಈ ವೇಳೆಯೇ ಅವರಿಗೆ ಹೃದಯಾಘಾತವಾಗಿದೆ. ತಕ್ಷಣವೇ ಅವರನ್ನು ಅಸ್ಪತ್ರೆಗೆ ದಾಖಲು ಮಾಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಸಾವು ಕಂಡಿದ್ದಾರೆ. ರೋಣ ಹಾಗೂ ಗದಗ ಕ್ಷೇತ್ರದ ಶಾಸಕರಾಗಿ ಅವರು ಸೇವೆ ಸಲ್ಲಿಸಿದ್ದರು.

1998 ರಲ್ಲಿ ರೋಣ ಕ್ಷೇತ್ರದಿಂದ ಜನತಾ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಶ್ರೀಶೈಲಪ್ಪ ಬಿದರೂರು , 2008 ರಲ್ಲಿ ಬಿಜೆಪಿಯಿಂದ ಗದಗ ಕ್ಷೇತ್ರದಿಂದ ಶಾಸಕರಾಗಿದ್ದರು . 2023 ರ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ರೋಣ ಅಥವಾ ಗದಗ ಯಾವುದಾದರೂ ಒಂದು ಕ್ಷೇತ್ರದಿಂದ ಸ್ಪರ್ಧೆ ಮಾಡಲು ಶ್ರೀಶೈಲಪ್ಪ ಬಿದರೂರು ಬಯಸಿದ್ದರು . ಆದ್ದರಿಂದ ಟಿಕೆಟ್’ಗಾಗಿ ಪ್ರಯತ್ನ ನಡೆಸಿದ್ದರು . 2018 ರ ಚುನಾವಣೆ ವೇಳೆ ಬಿಜೆಪಿ ಟಿಕೆಟ್ ಕೈ ತಪ್ಪಿದ ಕಾರಣ 2019 ರಲ್ಲಿ ಕಾಂಗ್ರೆಸ್ ಸೇರಿದ್ದ ಅವರು , ಬಿಜೆಪಿಯಲ್ಲಿದ್ದ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್ . ಯಡಿಯೂರಪ್ಪ ಅವರ ಆಪ್ತರಾಗಿ ಗುರುತಿಸಿಕೊಂಡಿದ್ದರು . ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದ್ದು ನನಗೆ ಎರಡು ವರ್ಷ ಚಿಕ್ಕವರಾಗಿದ್ದ ಅವರು , ಇಂದು ಕಚೇರಿಗೆ ಬಂದಾಗ ಹೃದಯಾಘಾತಕ್ಕೊಳಗಾಗಿದ್ದರು . ಆಸ್ಪತ್ರೆಯಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ . ಅವರ ನಿಧನದ ಹಿನ್ನೆಲೆಯಲ್ಲಿ ಈ ಸಭೆಯನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *